ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಪಾದಯಾತ್ರೆ : ಯತ್ನಾಳ್ ಆರೋಪ
ಬೆಳಗಾವಿ: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಲುವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸ್ವಪಕ್ಷೀಯರ ವಿರುದ್ಧವೇ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಂಗಳವಾರ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡುತ್ತಿರುವ ಹೋರಾಟ ಎಂದು ಆರೋಪಿಸಿದರು.
ಡಿ.ಕೆ.ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದ್ದು, ಶಿವಕುಮಾರ್ ಅವರ ಉಪಕಾರ ತೀರಿಸಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿಯೂ ದೊಡ್ಡ ಹಗರಣ ಆಗಿದ್ದು, ಒಂದು ಸಮುದಾಯದಕ್ಕೆ ಹೋಗಬೇಕಾದ ಹಣ ನುಂಗಿದ್ದಾರೆ. ಇನ್ನೊಂದು ಕಡೆ ಮುಡಾದಲ್ಲಿ ಒಬ್ಬ ದಲಿತನ ಜಮೀನು ಪೂರ್ತಿ ನುಂಗಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರಕಾರ ದಿವಾಳಿ ಆಗಿದ್ದು, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ನೀಡಬೇಕಿದ್ದ ಎರಡು ಸಾವಿರ ರೂ.ಹಣ ಮೂರು ತಿಂಗಳಿಂದ ಬಿಡುಗಡೆಯಾಗಿಲ್ಲ ಎಂದು ಯತ್ನಾಳ್ ಟೀಕಿಸಿದರು.