ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ
ಬೆಳಗಾವಿ : ವಿಧಾನ ಮಂಡಲ ಅಧಿವೇಶನ ಕಲಾಪವು ಡಿ.9ರಿಂದ ಇಲ್ಲಿನ ಸುವರ್ಣವಿಧಾನಸೌಧದಲ್ಲಿ ಪ್ರಾರಂಭವಾಗಿ ಡಿ.19ರ ವರೆಗೆ ಎಂಟು ದಿನಗಳ ಕಾಲ ಸುಮಾರು 64 ಗಂಟೆಗಳ ಅವಧಿ ಕಾರ್ಯ ಕಲಾಪವನ್ನು ನಡೆಸಲಾಯಿತು ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಕಲಾಪದಲ್ಲಿ ಮಾತನಾಡಿದ ಅವರು, ಈ ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 16 ವಿಧೇಯಕಗಳನ್ನು ಮಂಡಿಸಿ, ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ ಎಂದರು.
ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 8 ವರದಿಗಳು ಮತ್ತು ವಿಧಾನಮಂಡಲ ವಿವಿಧ ಸ್ಥಾಯಿ ಸಮಿತಿಗಳ 7 ವರದಿಗಳನ್ನು ಸದನದಲ್ಲಿ ಮಂಡಿಸಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ 49 ಸದಸ್ಯರುಗಳು ಭಾಗವಹಿಸಿದ್ದು ಸುಮಾರು 13 ಗಂಟೆ 11 ನಿಮಿಷಗಳ ಕಾಲ ಚರ್ಚೆ ನಡೆಸಲಾಗಿದೆ.
ನಿಯಮ 60ರಡಿಯಲ್ಲಿ ನೀಡಿದ್ದ 2 ನಿಲುವಳಿ ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಿರುವುದು ಸೇರಿದಂತೆ ಒಟ್ಟು 4 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿದೆ.
ಒಟ್ಟು 3,004 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 150 ಪ್ರಶ್ನೆಗಳ ಪೈಕಿ 137 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 2,237 ಪ್ರಶ್ನೆಗಳ ಪೈಕಿ 1,794 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ.
ಗಮನ ಸೆಳೆಯುವ 444 ಸೂಚನೆಗಳ ಪೈಕಿ 294 ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದೆ. ನಿಯಮ 351 ರಡಿಯಲ್ಲಿ 160 ಸೂಚನೆಗಳನ್ನು ಅಂಗೀಕರಿಸಿದ್ದು, 80 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 5 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ ಅಂಗೀಕರಿಸಲಾಗಿದೆ. ರಾಷ್ಟ್ರಪತಿಗಳು, ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿ ವರದಿಯನ್ನು ಮಂಡಿಸಲಾಗಿದೆ ಎಂದರು.
ರಾಜ್ಯದಲ್ಲಿ ಸುರಿದ ಅಧಿಕ ಮಳೆಯಿಂದ ಉಂಟಾದ ನಷ್ಟ ಕುರಿತಂತೆ ಕಂದಾಯ ಸಚಿವರು ನೀಡಿದ ಹೇಳಿಕೆಯ ಮೇಲೆ ಚರ್ಚಿಸಲಾಗಿದ್ದು, ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರು ಸ್ಪಷ್ಟೀಕರಣ ನೀಡಿದ್ದಾರೆ. 2024-25ನೆ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತು ಹಾಗೂ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸಿ ಡಿ.17ರಂದು ಮತಕ್ಕೆ ಹಾಕಿ ಅಂಗೀಕರಿಸಲಾಯಿತು ಎಂದು ಅವರು ತಿಳಿಸಿದರು.
ಸದನದಲ್ಲಿ ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅಂತಾರಾಷ್ಟ್ರೀಯ ವಿಶ್ವ ಚೆಸ್ ಚಾಂಪಿಯನ್ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗುಕೇಶ್ ದೊಮ್ಮರಾಜು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಸದನ ನಡೆಸಲು ಸಹಕರಿಸಿದ ಮುಖ್ಯಮಂತ್ರಿಗೆ, ವಿರೋಧ ಪಕ್ಷದ ನಾಯಕರಿಗೆ, ಸಂಪುಟದ ಸದಸ್ಯರಿಗೆ, ಸರಕಾರಿ ಮುಖ್ಯ ಸಚೇತಕರಿಗೆ ಎಲ್ಲ ಸದಸ್ಯರುಗಳಿಗೆ ಇಲಾಖಾ ಮುಖ್ಯಸ್ಥರು, ಅಧಿಕಾರಿ-ಸಿಬ್ಬಂದಿಗೆ, ಬೆಳಗಾವಿಯಲ್ಲಿ ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಿದ ಶಾಸಕರು ಮತ್ತು ನಿರಂತರವಾಗಿ ಪ್ರಯತ್ನಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಬೆಳಗಾವಿ ಜಿಲ್ಲಾಡಳಿತಕ್ಕೆ ಹಾಗೂ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಿದ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಬ್ಬಂದಿಗೆ ಹಾಗೂ ವಿಧಾನಸಭೆ ಸಚಿವಾಲಯದ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದರು.
ಇದೇ ವೇಳೆ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಹೇಳಿದ ಸ್ಪೀಕರ್ ಖಾದರ್, ರಾಷ್ಟ್ರಗೀತೆಯೊಂದಿಗೆ ಸದನವನ್ನು ಅನಿರ್ದಿಷ್ಟಾವಧಿ ಮುಂದೂಡಿಕೆ ಮಾಡಿದರು.