ಬೆಳಗಾವಿ ಅಧಿವೇಶನದ ಶತಮಾನೋತ್ಸವ | ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ : ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
ಬೆಳಗಾವಿ : ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 1924ರಲ್ಲಿ ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಾಹಾರ್ ಲಾಲ್ ನೆಹರು ಹಾಗೂ ಕರ್ನಾಟಕದ ಗಂಗಾಧರ ದೇಶಪಾಂಡೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು ಎಂದು ತಿಳಿಸಿದರು.
ಇಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರಕಾರ ಸ್ಥಾಪಿಸಿದೆವು ಎಂದು ಶಿವಕುಮಾರ್ ಹೇಳಿದರು.
ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲ ಪಕ್ಷಗಳಿಗೂ ಆಹ್ವಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ವಿರೋಧ ಪಕ್ಷಗಳ ನಾಯಕರು, ಸಂಸದರು, ವಿಧಾನಸಭೆ ಸ್ಪೀಕರ್, ವಿಧಾನಪರಿಷತ್ ಸಭಾಪತಿ, ಎಲ್ಲ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು ಎಂದು ಹೇಳಿದರು.
ಇದು ಸಂಪೂರ್ಣ ಸರಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ದೇಶದಾದ್ಯಂತ ಎಷ್ಟು ಜನ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500ರಿಂದ 600 ಜನ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.