ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ: ಲಕ್ಷ್ಮಣ ಸವದಿ
ಬೆಳಗಾವಿ: ಬೀದರ್ ಲೋಕಸಭಾ ಕ್ಷೇತ್ರದಿಂದ ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನೋಡಿ ಅಚ್ಚರಿಯುಂಟಾಗಿದೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಮಂಗಳವಾರ ಅಥಣಿಯ ಯಕ್ಕಂಚ್ಚಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಯೂ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗುತ್ತಿಲ್ಲ. ಅಥಣಿ ಕ್ಷೇತ್ರದ ಜನ ನನಗೆ ಶಾಸಕರಾಗಿ ಇರುವಂತೆ ಆದೇಶ ಮಾಡಿದ್ದಾರೆ. ಅದರಂತೆ ನಾನು ಶಾಸಕನಾಗಿಯೆ ಇರುತ್ತೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿವಿಧ ಇಲಾಖೆಗಳಿಂದ ಅಥಣಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುತ್ತಿದೆ. ಕಾಮಗಾರಿಯನ್ನು ಪ್ರಾರಂಭ ಮಾಡಲಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.
ಕೇಂದ್ರ ಸರಕಾರ ನಮ್ಮ ರಾಜ್ಯದ ಬಗ್ಗೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ನಾವು ಖಂಡಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಪಕ್ಷದ ಎಲ್ಲ 136 ಶಾಸಕರು ಹೊಸದಿಲ್ಲಿಯಲ್ಲಿ ಕೇಂದ್ರ ಸರಕಾರದ ಧೋರಣೆ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ತಿಳಿಸಿದರು.