ಮಕ್ಕಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ವಿಜ್ಞಾನ ಕೇಂದ್ರಗಳ ಸ್ಥಾಪನೆ : ಸಚಿವ ಭೋಸರಾಜು
ಹಿಡಕಲ್ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ-ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆ ಭರವಸೆ

ಬೆಳಗಾವಿ : ರಾಜ್ಯ ಸರಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಿದೆ. ಇಂದು ಶಂಕುಸ್ಥಾಪನೆಯಾಗಿರುವ ಹಿಡಕಲ್ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು .
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಿಡಕಲ್ ಉದ್ಯಾನಕಾಶಿಯಲ್ಲಿ ಸೋಮವಾರ(ಜ.20) ರಾಜಾ ಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಉಪಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ಮಿನಿ ತಾರಾಲಯಗಳಳನ್ನು ಸ್ಥಾಪಿಸಲಾಗಿದೆ. ಇನ್ನುಳಿದ ಮೂರು ಜಿಲ್ಲೆಗಳಲ್ಲಿ ಇವುಗಳ ಸ್ಥಾಪನೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಬೆಂಗಳೂರಿನ ಹೆಬ್ಬಾಳದಲ್ಲಿ ಏಷಿಯಾ ಖಂಡದಲ್ಲಿ ನಂಬರ್ ಒನ್ ಮಾದರಿಯಲ್ಲಿ ಸೈನ್ಸ್ ಗ್ಯಾಲರಿ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ತಾರಾಲಯ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ. ಮಂಗಳೂರು ಜಿಲ್ಲೆಯ ಪಿಲಿಕುಳಿಯಲ್ಲಿ 350 ಎಕರೆ ಪ್ರದೇಶದಲ್ಲಿ ದೊಡ್ಡ ತಾರಾಲಯವನ್ನು ಸ್ಥಾಪಿಸಲಾಗಿದೆ. ಸರಕಾರದ ವತಿಯಿಂದ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ಲ್ಯಾಬರೋಟರಿಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಈಗಾಗಲೇ 13 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ತಾರಾಲಯ ಉಪಯೋಗವಾಗಲಿದೆ. ಜಿಲ್ಲೆಯಲ್ಲಿ ಪ್ರವಾಸೊದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸಿ ಸರ್ಕಿಟ್ ನಿರ್ಮಿಸಲು ಗೋಕಾಕ್ ಫಾಲ್ಸ್, ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯ ಹಾಗೂ ಹಿಡಕಲ್ ಡ್ಯಾಂ ಯೋಜನೆಯೊಂದಿಗೆ ಪ್ರವಾಸಿ ಸರ್ಕಿಟ್ ನಿರ್ಮಿಸುವ ಯೋಜನೆ ಸರಕಾರದ್ದಾಗಿದೆ. ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆಗಳಿಗೂ ಪ್ರಾಶಸ್ತ್ಯವಾಗಿದ್ದು ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.
ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಕ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಬೆಳಗಾವಿ ಉತ್ತರ ವಲಯದ ಮುಖ್ಯ ಇಂಜಿನಿಯರ್ ಬಿ.ಆರ್ ರಾಠೋಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.