ಸುವರ್ಣ ವಿಧಾನಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ : ಡಿಸಿಎಂ ಡಿ.ಕೆ.ಶಿವಕುಮಾರ್
"ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ"

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧ ಆವರಣದಲ್ಲಿ ಜ.21ರಂದು ಜರುಗಲಿರುವ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶನಿವಾರ ಸುವರ್ಣ ವಿಧಾನಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪ್ರತಿಮೆ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನಪರಿಷತ್ತಿನ ಸಭಾಪತಿ ಭಾಗವಹಿಸಲಿದ್ದಾರೆ. ಎಲ್ಲ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
ಕಾರ್ಯಕ್ರಮದ ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿ ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಸ್ವಾತಂತ್ರ್ಯ ಹೋರಾಟಗಾರ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಮುಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಈ.ಡಿ ಸಂಸ್ಥೆ ಕೈಗೊಂಡಿರುವ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ ಎಂದು ಹೇಳಿದರು.
ನಾನು ಈಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಯಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದು ಶಿವಕುಮಾರ್ ತಿಳಿಸಿದರು.