ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಸಂಡೂರು : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರವಿವಾರ ಸಂಡೂರಿನಲ್ಲಿ ಮತದಾರರಿಗೆ ಅಭಿನಂದನಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿತ್ತು. ಇದೀಗ ಆ ಮೊತ್ತವನ್ನು ಐದು ಲಕ್ಷಕ್ಕೇರಿಸಲು ನಿರ್ಧರಿಸಿದ್ದೇವೆ ಎಂದರು.
ಐವರು ಬಾಣಂತಿಯರು ಮೃತಪಟ್ಟಿರುವ ಪ್ರಕರಣ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾರದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಇದು ದುರದೃಷ್ಟ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ನಾವು ನುಡಿದಂತೆ ನಡೆದಿದ್ದೇವೆ, ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಯಾವುದೇ ಜಾತಿ, ಪಕ್ಷ ಭೇದ ಮಾಡದೇ ಗ್ಯಾರಂಟಿ ಯೋಜನೆ ನೀಡಿದ್ದೇವೆ. ನಾವು 2028ರವರೆಗೆ ಅಧಿಕಾರದಲ್ಲಿ ಇರುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ. 2028ರ ಬಳಿಕ ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.