ಬೀದರ್ ಪ್ರವಾಸೋದ್ಯಮ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಬಿಡುಗಡೆ : ಸಂಸದ ಸಾಗರ್ ಖಂಡ್ರೆ

ಬೀದರ್ : ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ವದೇಶ ದರ್ಶನ ಯೋಜನೆಯಡಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು 25 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಲೋಕಸಭಾ ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.
ಈ ಹಿಂದೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಆ ಮನವಿಗೆ ಸ್ಪಂದಿಸಿರುವ ಕೇಂದ್ರದ ಪ್ರವಾಸೋದ್ಯಮ ಸಚಿವರು, ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಹಿನ್ನೆಲೆ ದೆಹಲಿಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮ ಉತ್ತೇಜಿಸಲು ಈ ಅನುದಾನ ಬಳಕೆಯಾಗಲಿದೆ. ಪ್ರಸ್ತುತ ಪ್ರವಾಸೋದ್ಯಮ ಇಲಾಖೆಯ ಕ್ರಿಯಾಯೋಜನೆಯು ತಯಾರಿಸುತ್ತಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳ್ಳಲಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಗಲಿವೆ. ಈ ಅನುದಾನದ ನೆರವಿನಿಂದ ಜಿಲ್ಲೆಯ ಪ್ರವಾಸಿ ತಾಣಗಳ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ದೊರೆಯುವುದಕ್ಕೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.