ಬೀದರ್ ಯಾತ್ರಿಕರ ದುರ್ಮರಣ : ಸಚಿವ ರಹೀಂ ಖಾನ್ ಸಂತಾಪ

ಬೀದರ್ : ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ ಬೀದರ್ ನಗರದ ಯಾತ್ರಾರ್ಥಿಗಳು ಉತ್ತರ ಪ್ರದೇಶದ ರುಪಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತರಾಗಿರುವ ದುಃಖದ ಸುದ್ದಿ ನನಗೆ ಆಘಾತ ತಂದಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಸಂತಾಪ ಸೂಚಿಸಿದ್ದಾರೆ.
ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ನಾನು ಆಳವಾದ ಸಂತಾಪ ವ್ಯಕ್ತಪಡಿಸುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹಾಗೂ ನಾನು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಮೃತ ದೇಹಗಳನ್ನು ಬೀದರ್‌ಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇವೆ.
ಮೃತರ ಕುಟುಂಬಗಳಿಗೆ ದೇವರು ದುಃಖ ಸಹಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
ಪ್ರಯಾಗರಾಜ್ ಕುಂಭಮೇಳಕ್ಕೆ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಇದರಲ್ಲಿ 5 ಜನ ಮೃತಪಟ್ಟಿದ್ದರೆ, 7 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.