ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿ : ಸಚಿವ ಈಶ್ವರ್ ಖಂಡ್ರೆ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಬೀದರ್ : ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರ ಸಂಯುಕ್ತಾಶ್ರಯದಲ್ಲಿ ನಗರದ ಪ್ರತಾಪ ನಗರದ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಗುರುತಿಸಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಮಾ.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಮಹಿಳೆಯರ ಹಕ್ಕು, ಸಮಾನತೆ ಮತ್ತು ಸಾಧನೆಗಳನ್ನು ತಿಳಿಸಲು 1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದು ಘೋಷಿಸಿತು ಎಂದರು.
ನಮ್ಮ ಸರ್ಕಾರ ಈ ವರ್ಷ ಪಂಚ ಗ್ಯಾರಂಟಿಗಾಗಿ 51,000 ಕೋಟಿ ರೂ. ನೀಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೇವೆ. ಮಹಿಳೆಯರಿಗೆ ಉಚಿತವಾಗಿ ಸಂಚಾರಿಸಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ನಿನ್ನೆ ಮಂಡಿಸಿದ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಾಗಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದು ನುಡಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆಯಾಗಿರಬೇಕು. ಮಹಿಳೆ ಪ್ರತಿ ಹಂತದಲ್ಲೂ ಪುರುಷನಷ್ಟೇ ಸಮಾನಳಾಗಿದ್ದಾಳೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಮ್.ಎಚ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ್ ಸೇರಿದಂತೆ ವಿವಿಧ ಇಲಾಖೆಯ ಮಹಿಳಾ ಅಧಿಕಾರಿಗಳು ಉಪಸ್ಥಿತರಿದ್ದರು.