ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಅನುಮತಿ
ಬೆಂಗಳೂರು, ನ.29: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಿದ್ದ ಈ ಹಿಂದಿನ ರಾಜ್ಯ ಸರ್ಕಾರದ ಅನುಮತಿ ರದ್ದುಪಡಿಸಿದ ಈಗಿನ ರಾಜ್ಯ ಸರ್ಕಾರದ ಕ್ರಮಕ್ಕೆ ಅನುಗುಣವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇದ್ದ ಮೇಲ್ಮನವಿಯನ್ನು ಹಿಂಪಡೆದಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಆ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಹಿಂದಿನ ಬಿಜೆಪಿ ಸರಕಾರ ಸಿಬಿಐ ತನಿಖೆ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ನಡೆಯನ್ನು ಆಕ್ಷೇಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಿಲ್ಲ
ಬುಧವಾರ ಪ್ರಕರಣ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಸಿಜೆ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರ ಮನವಿ ಹಿಂಪಡೆಯಲಾಗಿದೆ ಎಂದು ತಿಳಿಸಿತು.
ಮೇಲ್ಮನವಿ ಹಿಂಪಡೆದ ಮನವಿಯನ್ನು ಹೈಕೋರ್ಟ್ ಪರಿಗಣಿಸಿದೆ. ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಮಂಡಿಸಿದ್ದ ವಾದವನ್ನೂ ಹೈಕೋರ್ಟ್ ವಿಭಾಗೀಯ ಪೀಠ ಈ ವೇಳೆ ಪರಿಗಣಿಸಲಿಲ್ಲ.