ಚಾಮರಾಜನಗರ : ಬೈಕ್- ಕಾರು ಢಿಕ್ಕಿ; ಮೂವರು ಮೃತ್ಯು

ಚಾಮರಾಜನಗರ: ದೇವರ ದರ್ಶನ ಪಡೆದು ಸ್ವಗ್ರಾಮಕ್ಕೆ ಮರುಳುವಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದ ಬೈಕ್ ಸವಾರ ಶಶಿಧರ್(28), ಪತ್ನಿ ಶಾಲಿನಿ(22) ಹಾಗೂ ತಾಯಿ ಭಾಗ್ಯಮ್ಮ(50) ಮೃತರಾಗಿದ್ದು, ಇವರ ಹಿಂದೆ ಬೈಕ್ ನಲ್ಲಿ ಬರುತ್ತಿದ್ದ ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದ ರಾಜಣ್ಣ(40) ಎಂಬವರಿಗೂ ಕಾರು ತಗುಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿ ವಾಪಸ್ ಸ್ವಗ್ರಾಮಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಂಜನಗೂಡು ಕಡೆಯಿಂದ ವೇಗವಾಗಿ ಬಂದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಮಾಹಿತಿ ಅರಿತ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೂವರ ಮೃತದೇಹಗಳನ್ನು ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.
ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.