ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ತುರ್ತು ಕ್ರಮವಹಿಸಬೇಕು: ಶಾಸಕಿ ನಯನಾ ಮೋಟಮ್ಮ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಜ್ವಲಂತ ಸಮಸ್ಯೆಗಳ ಪರಿಹಾರ ಸಂಬಂಧ ಗುರುವಾರ ಜಿಪಂ ಕಚೇರಿಯ ಸಭಾಂಗಣದಲ್ಲಿ ಶಾಸಕಿ ನಯನಾ ಮೋಟಮ್ಮ ಅಧ್ಯಕ್ಷೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯ ಆಶ್ರಯ ಮನೆ, ಸ್ಮಶಾನ ಭೂಮಿ, ಕುಡಿಯುವ ನೀರು, ಅತೀವೃಷ್ಟಿ ನಿರಾಶ್ರಿತರ ಪುನರ್ವಸತಿ, ಸಾರಗೋಡು, ಕುಂದೂರು ಅರಣ್ಯ ಭೂಮಿ ಸಂತ್ರಸ್ಥರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ನಯನಾ ಮೋಟಮ್ಮ ಸಮಸ್ಯೆ ಪರಿಹಾರ ಸಂಬಂಧ ಅಧಿಕಾರಿಗಳಿಂದ ಪ್ರಗತಿಯ ಮಾಹಿತಿ ಪಡೆದು ಶೀಘ್ರ ಕ್ರಮಕ್ಕೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಆಶ್ರಯ ಮನೆ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ತೀವ್ರವಾಗಿದೆ. ಕ್ಷೇತ್ರದಲ್ಲಿ ಸ್ಮಶಾನ ಭೂಮಿಗೂ ಜಾಗದ ಕೊರತೆ ಉಂಟಾಗಿದೆ. ಸಂಬಂಧಿಸಿದ ಅಧಿಕಾರಿಗಳು ನಿವೇಶನ, ಆಶ್ರಯ ಮನೆ ನಿರ್ಮಾಣ ಹಾಗೂ ಸ್ಮಶಾನ ಭೂಮಿ ಸಮಸ್ಯೆ ಪರಿಹಾರಕ್ಕೆ ಸೂಕ್ತ ಜಾಗ ಗುರುತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೆಲ ವರ್ಷಗಳ ಹಿಂದೆ ಕ್ಷೇತ್ರ ವ್ಯಾಪ್ತಿ ಕಳಸ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಭೂ ಕುಸಿತದಿಂದಾಗಿ ಸಂತ್ರಸ್ಥರಾದವರಿಗೆ ಪುನರ್ವಸತಿ ಕಲ್ಪಿಸಲು ಜಾಗ ಗುರುತು ಮಾಡಲಾಗಿದೆ. ಈ ಸಂತ್ರಸ್ಥರಿಗೆ ನಿವೇಶನ ಸೌಲಭ್ಯ ನೀಡಲಾಗಿದೆ. ನಿವೇಶನಗಳಿಗೆ ಹಕ್ಕುಪತ್ರ ಹಾಗೂ ಮೂಲಸೌಕರ್ಯ ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ತುರ್ತಾಗಿ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಮೂಡಿಗೆರೆ ತಾಲೂಕಿನ ಕುಂದೂರು ಮತ್ತು ಸಾರಗೋಡು ಅರಣ್ಯ, ಕಂದಾಯ ಭೂಮಿ ಸಮಸ್ಯೆಯನ್ನು ಪ್ರಸ್ತಾಪಿಸಿದ ಶಾಸಕಿ ನಯನಾ ಮೋಟಮ್ಮ, ಈ ಗ್ರಾಮಗಳಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ, ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ.ಗೋಪಾಲ ಕೃಷ್ಣ ಹಾಗೂ ವಿವಿಧ ಇಲಾಖೆಗಳ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಳಸ ತಾಲೂಕಿನ ಕೋಣೇಬೈಲು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಗಮನಕ್ಕೆ ಬಂದಿದ್ದು, ಈ ಸಂಬಂಧ ಜಿಪಂ ಸಿಇಒ ಬಳಿ ಚರ್ಚಿಸಿದ್ದೇನೆ. ಸಿಇಒ ಮಟ್ಟದಲ್ಲಿ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಲಾಗುವುದು.
ನಯನಾ ಮೋಟಮ್ಮ, ಶಾಸಕಿ