ಚಿಕ್ಕಮಗಳೂರು: ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ; ಬಾಣಂತಿ ಮೃತ್ಯು
ಕುಟುಂಬಸ್ಥರಿಂದ ಪ್ರತಿಭಟನೆ
ರಂಜಿತಾ ಬಾಯಿ
ಚಿಕ್ಕಮಗಳೂರು : ಜಿಲ್ಲಾಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆಯ ಆವರಣದಲ್ಲಿ ಕೆಲ ಕಾಲ ಪ್ರತಿಭಟಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಕಡೂರು ತಾಲೂಕಿನ ವಡರೇಹಳ್ಳಿ ತಾಂಡ್ಯದ ನಿವಾಸಿ ರಂಜಿತಾ ಬಾಯಿ(22)ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನ ಹೆರಿಗೆಯಾಗಿದ್ದು, ರಾತ್ರಿ ವೇಳೆ ರಂಜಿತಾ ಬಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದರೂ ಅಸ್ಪತ್ರೆ ಸಿಬ್ಬಂದಿ ಸ್ಪಂದಿಸಿಲ್ಲ, ಸಕಾಲದಲ್ಲಿ ವೈದ್ಯರು ಬಂದು ತಪಾಸಣೆ ಮಾಡಿಲ್ಲ,ಹೆರಿಗೆ ಮಾಡಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಹಣ ಕೇಳುತ್ತಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಬಾಣಂತಿಯ ಸಾವಿಗೆ ಕಾರಣರಾದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಂಬಂಧಿಕರು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದರಿಂದ ಸಂಬಂಧಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆಂದು ತಿಳಿದು ಬಂದಿದೆ.
Next Story