ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿ.ಕೆ.ಶಿವಕುಮಾರ್
ಶೃಂಗೇರಿ, ಜ.11: "ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ, ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಉತ್ತರಿಸಿದರು.
ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದಾಗ, "ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ. ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು, ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ" ಎಂದು ಸ್ಪಷ್ಟಪಡಿಸಿದರು.
ಟೆಂಪಲ್ ರನ್ ಎನ್ನುವವರು, ದೇವಾಲಯ ಮುಚ್ಚಿಬಿಡಿ:
ನೀವು ದೇವಾಲಯ ಹಾಗೂ ಮಠಗಳ ಭೇಟಿಗೆ ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ ಎಂದು ಕೇಳಿದಾಗ, "ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು. ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ. ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡುವುದಾದರೆ ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ. ಸರಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ? ಅವರವರ ವಿಚಾರ ಅವರವರ ನಂಬಿಕೆ. ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ. ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ" ಎಂದು ತಿಳಿಸಿದರು.
ಪಕ್ಷ ಹೇಳಿದಂತೆ ನಾನು, ಸಿಎಂ ಕೆಲಸ ಮಾಡುತ್ತಿದ್ದೇವೆ:
ನೀವು ಶೃಂಗೇರಿಗೆ ಭೇಟಿ ನೀಡಿದಾಗೆಲ್ಲಾ ನಿಮ್ಮ ರಾಜಕೀಯ ಜೀವನದಲ್ಲಿ ಹಲವು ತಿರುವುಗಳು ಪಡೆದಿವೆ ಎಂದು ಕೇಳಿದಾಗ, ಪ್ರತಿಕ್ರಿಯಿಸಿದ ಡಿಕೆಶಿ, "ಯಾರೂ ತಲೆಕೆಡಿಸಿಕೊಳ್ಳುವುದು ಬೇಡ. ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ. ಐದು ವರ್ಷ ಸರ್ಕಾರ ಮಾಡುತ್ತೇವೆ. ಪಕ್ಷ ಹೇಳಿದಂತೆ ನಾನು ಹಾಗೂ ಸಿಎಂ ಕೆಲಸ ಮಾಡುತ್ತೇವೆ. ಬೇರೆಯವರ ಮಾತುಗಳು ಗೌಣ" ಎಂದು ತಿಳಿಸಿದರು.