ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ಸಿದ್ದಿಕ್ ಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು
ಮಲಯಾಳಂ ನಟ ಸಿದ್ದಿಕ್ (PTI)
ಹೊಸದಿಲ್ಲಿ: ನಟಿಯೋರ್ವಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಮಲಯಾಳಂ ನಟ ಸಿದ್ದಿಕ್ ಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಬೇಲಾ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 30ರಂದು ನೀಡಲಾದ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಖಾಯಂಗೊಳಿಸಿದೆ. ಪಾಸ್ ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿನ ಮೇರೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಅವರಿಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಧೈರ್ಯವಿತ್ತು ಆದರೆ 8 ವರ್ಷಗಳ ಕಾಲ ಪೊಲೀಸರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲವೇ? ಎಂದು ವಿಚಾರಣೆ ವೇಳೆ ನ್ಯಾಯಾಲಯ ಪ್ರಶ್ನಿಸಿದೆ.
ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ ನ ಸೆಪ್ಟೆಂಬರ್ 24ರ ಆದೇಶದ ವಿರುದ್ಧ ಸಿದ್ದಿಕ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಹಿಂದೆ ಸುಪ್ರೀಂ ಕೋರ್ಟ್ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿತ್ತು.