ಕಡಬ | ಕಾರು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ಪ್ರಕರಣ: ಆರೋಪಿಯ ಪತ್ತೆಗೆ ಆಗ್ರಹಿಸಿ ಸಂಘ ಪರಿವಾರದಿಂದ ಹೆದ್ದಾರಿ ತಡೆ
ಅಪಘಾತಕ್ಕೆ ಕಾರಣವಾದ ಆರೋಪದಲ್ಲಿ ಇಬ್ಬರು ಪೊಲೀಸ್ ವಶಕ್ಕೆ
ಕಡಬ, ಮಾ.30: ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಂಘಪರಿವಾರದ ಕಾರ್ಯಕರ್ತರು ಶನಿವಾರ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ನಡುವೆ ಅಪಘಾತಕ್ಕೆ ಸಂಬಂಧಿಸಿ ಇಬ್ಬರನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿಠಲ ರೈ ಸ್ಥಳದಲ್ಲೇ ಮೃತಪಟ್ಟಿದ್ದರು. ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ. ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದರೆನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ನಡುವೆ ವಿಷಯ ತಿಳಿದು ಸಂಘ ಪರಿವಾರದ ಕಾರ್ಯಕರ್ತರು ಜಮಾಯಿಸಿ ಆರೋಪಿಗಳ ಪತ್ತೆಗೆ ಆಗ್ರಹಿಸಿ ತಡರಾತ್ರಿ ಕಡಬದಲ್ಲಿ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ತಡೆದು ಧರಣಿ ನಡೆಸಿದರು.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸುವಂತೆ ಪಟ್ಟು ಹಿಡಿದಿದ್ದರು
ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಅರುಣ್ ಪುತ್ತಿಲ ಮೊದಲಾದವರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದರು.
ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನು ಹಿಂಪಡೆದರು.
ಧರಣಿನಿರತರು ಆರೋಪಿಗಳ ಬಂಧನಕ್ಕೆ ರವಿವಾರ ಮಧ್ಯಾಹ್ನದ ವರೆಗೆ ಗಡುವು ನೀಡಿದೆ.
ಈ ನಡುವೆ ಕೃತ್ಯದಲ್ಲಿ ಭಾಗಿಯಾಗಿದ್ದರೆನ್ನಲಾದ ಇಬ್ಬರು ಆರೋಪಿಗಳನ್ನು ಬೆಳಗ್ಗಿನ ಜಾವ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.