ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
ಮಂಗಳೂರು,ಆ.15: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ರಾಷ್ಟ್ರ ಧ್ವಜಾರೋಹಣ ಬಳಿಕ ಸಚಿವರು ಗೌರವ ವಂದನೆ ಸ್ವೀಕರಿಸಿ, ಪರೇಡ್ ವೀಕ್ಷಿಸಿದರು.
ಜಿಲ್ಲೆಯ 16 ವಿವಿಧ ತಂಡಗಳಿಂದ ಆಕರ್ಷಕ ಪಥಸಂಚನ ನಡೆಯಿತು. ಪಥ ಸಂಚಲನದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಎನ್ಸಿಸಿ ಆರ್ಮಿ ತಂಡ ದ್ವಿತೀಯ ಸ್ಥಾನ ಪಡೆಯಿತು.
ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಕಿರುಚಿತ್ರ- ರೀಲ್ಸ್ ರಚನೆ ಸ್ಪರ್ಧೆಯ ವಿಜೇತರಿಗೆ ಈ ಸಂದರ್ಭ ಬಹುಮಾನ ವಿತರಿಸಲಾಯಿತು.
ಪ್ರತಿಷ್ಠಿತ ಡಾ. ಬಿ.ಸಿ. ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಅಜಯ್, ಡಾ. ಸದಾನಂದ ಪೂಜಾರಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್, ಎಸ್ಪಿ ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.