ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ
ಮಂಗಳೂರು: ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ(67) ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ತೆಂಕುತಿಟ್ಟು ಯಕ್ಷಗಾನದಲ್ಲಿ ಪ್ರಸಿದ್ಧ ಹಾಸ್ಯಗಾರರಾಗಿದ್ಧರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಹನುಮಗಿರಿ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದ ಜಯರಾಮ ಆಚಾರ್ಯ ಅವರು, ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ರವಿವಾರ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬೆಂಗಳೂರಿನ ಆರ್.ಕೆ.ಭಟ್ ಮನೆಯಲ್ಲಿ ಉಳಿದುಕೊಂಡಿದ್ದ ತಂಡದಲ್ಲಿದ್ದ ಜಯರಾಮ ಆಚಾರ್ಯರಿಗೆ ಸೋಮವಾರ ಮುಂಜಾನೆ ನಾಲ್ಕು ಗಂಟೆಯ ವೇಳೆ ಹೃದಯಸ್ತಂಭನವಾಗಿದೆ. ಸಹ ಕಲಾವಿದರು ಆಸ್ಪತ್ರೆಗೆ ಸೇರಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜಯರಾಮ ಆಚಾರ್ಯ ಅವರು ಬಂಟ್ವಾಳದಲ್ಲಿ 1957 ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿಯರ ಪುತ್ರರಾಗಿ ಜನಿಸಿದರು. ಬಂಟ್ವಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ಬೋರ್ಡ್ ಶಾಲೆ) ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ'ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು. ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ.