ದಾವಣಗೆರೆ | ಬೈಕ್ಗೆ ಕಾರು ಢಿಕ್ಕಿ; ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ದಾವಣಗೆರೆ : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.
ದಾವಣಗೆರೆಯ ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್ನಲ್ಲಿ ಬರುತ್ತಿದ್ದಾಗ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ತಿಕ್ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆಯುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂ ಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.