ಸಿದ್ದರಾಮಯ್ಯರಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಮರು ವಿಂಗಡನೆ ವಿಚಾರವನ್ನು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟಕರ. ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ವಿಫಲರಾಗಿದ್ದಾರೆ. ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಇಂತಹ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕರ್ನಾಟಕ ದಿವಾಳಿ ಅಂಚಿನಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಸ್ಸಿ ಎಸ್ಟಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗ ಆಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ಆರೋಪಿಸಿದರು.
ಕ್ಷೇತ್ರ ಮರುವಿಂಗಡನೆ ಸಂಸತ್ತಿನ ಮೂರನೇ ಎರಡರಷ್ಟು ಬಹುಮತದೊಂದಿಗೆ ಆಗತ್ತದೆ. ಒಂದೇ ರಾತ್ರಿಗೆ ಆಗುವುದಿಲ್ಲ. ಕ್ಷೇತ್ರ ಮರುವಿಂಗಡನೆ ಮಾಡಲು ಸಂವಿಧಾನ ಬದ್ದ ಸಮಿತಿ ಇದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಯಾವುದೇ ರಾಜ್ಯಕ್ಕೂ ಅನ್ಯಾಯ ಆಗುವುದಿಲ್ಲ ಎಂದು ಸಂಸತ್ತಿನಲ್ಲಿಯೇ ಸ್ಪಷ್ಟಪಡಿಸಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.