ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಚಿಂತನೆ : ಕೇಂದ್ರ ಸಚಿವ ವಿ.ಸೋಮಣ್ಣ
ವಿ.ಸೋಮಣ್ಣ(PC:x/@VSOMANNA_BJP)
ಬೆಳಗಾವಿ : ‘ಸಾರ್ವಜನಿಕ ಪ್ರಯಾಣಿಕರಿಗೆ ಉತ್ಕೃಷ್ಟ ಸೇವೆಯನ್ನು ಒದಗಿಸುವ ಏಕೈಕ ಉದ್ದೇಶದಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲನ್ನು ಸ್ವಾಗತಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಂಕಣ ರೈಲ್ವೆ ಜಾಲ ಕೇರಳ ರಾಜ್ಯದಿಂದ ಮಹಾರಾಷ್ಟ್ರದ ವರೆಗೆ ವಿಸ್ತರಿಸಿದೆ. ಹೀಗಾಗಿ, ಪ್ರಯಾಣಿಕರಿಗೆ ಇನ್ನೂ ಉತ್ತಮ ಸೇವೆ ಕಲ್ಪಿಸುವ ಉದ್ದೇಶದಿಂದ ಇದನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಚಿಂತನೆ ನಡೆಸಿದೆ ಎಂದರು.
‘ಆ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕ, ಕೇರಳ ಮತ್ತು ಗೋವಾ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದು, ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ಬಳಿಕ ವಿಲೀನ ಪ್ರಕ್ರಿಯೆಯನ್ನು ಆರಂಭವಾಗಲಿದೆ ಎಂದು ಅವರು ನುಡಿದರು.
ಪುಣೆಯಿಂದ ವಂದೇ ಭಾರತ್ ರೈಲು ಬೆಳಗಾವಿಗೆ ಬರುತ್ತಿದ್ದಂತೆ ಚಪ್ಪಾಳೆ ತಟ್ಟಿ ಜನತೆ ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಸಂಸದ ಜಗದೀಶ್ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಸವಿತಾ ಕಾಂಬಳೆ, ಮಾಜಿ ಸಂಸದೆ ಮಂಗಳಾ ಅಂಗಡಿ ಇದ್ದರು.