ಹುಬ್ಬಳ್ಳಿ : ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ
ದುಷ್ಕರ್ಮಿಯ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ, ಸ್ಥಳಕ್ಕೆ ಕಮಿಷನರ್ ಭೇಟಿ

ಹುಬ್ಬಳ್ಳಿ : ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಹತ್ಯೆ ಮಾಡಿರುವಂತಹ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ದುಷ್ಕರ್ಮಿಯು ಬಾಲಕಿಯನ್ನು ಶೆಡ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿಯ ಕೂಗಾಟ ಕೇಳಿಸಿ ಶೆಡ್‌ನತ್ತ ಸ್ಥಳೀಯರು ಧಾವಿಸಿದ್ದಾರೆ. ಈ ವೇಳೆ ದುಷ್ಕರ್ಮಿ ಬಾಲಕಿ ಕತ್ತು ಹಿಸುಕಿ ಹತ್ಯೆಗೈದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ವ್ಯಕ್ತಿಯೊಬ್ಬ ಮನೆ ಮುಂದೆ ಆಟ ಆಡುತ್ತಿರುವ ಬಾಲಕಿಯನ್ನು ಎತ್ತಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದು, ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ.
ವಿಶೇಷ ತಂಡ ರಚನೆ :
ಪರಾರಿಯಾಗಿರುವ ಆರೋಪಿ ಪತ್ತೆಗೆ 5 ವಿಶೇಷ ತಂಡ ರಚನೆ ಮಾಡಲಾಗಿದ್ದು, ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಬಾಲಕಿ ಹತ್ಯೆ ಖಂಡಿಸಿ ಪ್ರತಿಭಟನೆ :
ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಹಿನ್ನಲೆ ದುಷ್ಕರ್ಮಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಬಾಲಕಿಯ ಕುಟಂಬಸ್ಥರು ಮತ್ತು ಸ್ಥಳೀಯರು ಅಶೋಕ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ.