ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ
PC : x/@siddaramaiah
ಹಾಸನ : ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಸ್ಥಳ ಪರಿಶೀಲನೆ ನಡೆಸುವ ವೇಳೆ ಅವೈಜ್ಞಾನಿಕ ಕಾಮಗಾರಿ ಕಂಡು ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.
ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?. ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು. ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಇಲ್ಲಿನ ಒಟ್ಟಾರೆ ಸ್ಥಿತಿಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುತ್ತೇನೆ. ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನಾವು ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.