ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ : ಬಸವರಾಜ ಬೊಮ್ಮಾಯಿ

ಹಾವೇರಿ : ಸರಕಾರದ ವಿರುದ್ದ ಪ್ರತಿಭಟನೆ ಮಾಡಿದರೆ ಬಿಜೆಪಿ ಕಾರ್ಯಕರ್ತರ ಮೇಲೆ ಒತ್ತಡ ಹಾಕಿ, ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪಭುತ್ವ ಇಲ್ಲ. ಅಘೋಷಿತ ತುರ್ತುಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರಕಾರದ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ರವಿವಾರ ಹಾವೇರಿಯಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 1975ರಲ್ಲಿ ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರಿಂದ ಯಾರಿಗೂ ಸ್ವಾತಂತ್ರ್ಯ ಇರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಂದ ಶುರುವಾದ ಹೋರಾಟ ಸಂಪೂರ್ಣ ಕ್ರಾಂತಿಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಅಡ್ವಾಣಿ ಸೇರಿದಂತೆ ಎಲ್ಲರೂ ಹೋರಾಟಕ್ಕೆ ಇಳಿದರು ಎಂದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಜನಪರ ಕೆಲಸ ಮಾಡಿದೆ. ರೈತರು, ತಾಯಂದಿರು, ಎಸ್ಸಿ ಎಸ್ಪಿ, ಒಬಿಸಿ ಜನಾಂಗಕ್ಕೆ ಯಾವಾಗಲೂ ಸಹಾಯ ಮಾಡುತ್ತ ಬಂದಿದೆ. ನಮ್ಮ ಬೆನ್ನನ್ನು ನಾವು ಯಾವತ್ತೂ ಚಪ್ಪರಿಸಿಕೊಳ್ಳುವುದಿಲ್ಲ. ಆದರೆ, ಕಾಂಗ್ರೆಸ್ ಯಾವಾಗಲೂ ಪ್ರಚಾರ ಮಾಡಿಕೊಳ್ಳುತ್ತದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬಿಸಿ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರ ಪಕ್ಷ ಒಬಿಸಿಗೆ ಏನು ಮಾಡಿದೆ ಎಂದು ಅವರು ಪ್ರಶ್ನಿಸಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗದ ಮುಖ್ಯಮಂತ್ರಿ ಇದ್ದಾರೆ. ಒಬಿಸಿ ನಿಗಮಗಳಿಗೆ ಯಾವುದೇ ಅನುದಾನ ನೀಡುತ್ತಿಲ್ಲ. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳವನ್ನು ನಾವು ಮಾಡಿದ್ದೇವೆ. ಯಾವ ಮುಖ್ಯಮಂತ್ರಿ ಇಂತಹ ಗಟ್ಟಿ ನಿರ್ಧಾರ ಮಾಡುತ್ತಿದ್ದರು ಎಂದು ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅವರು ಹೇಳಿದಷಟೇ ಕಮಿಷನ್ ನಿರ್ಧಾರವಾಗುತ್ತಿದೆ. ಕಳೆದ ವರ್ಷ 40 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ತೆರಿಗೆ ಹಾಕಿದ್ದರು, ಈ ವರ್ಷ ಬಜೆಟ್ ಇಲ್ಲದೇ 60 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಹಾಲು, ಡಿಸೇಲ್, ಕರೆಂಟ್ ಎಲ್ಲ ದರ ಹೆಚ್ಚಳ ಮಾಡಿದ್ದಾರೆ. ಇವತ್ತು ಅಭಿವೃದ್ಧಿ ಶೂನ್ಯ ಸರಕಾರ ರಾಜ್ಯದಲ್ಲಿದೆ ಎಂದು ಅವರು ಆರೋಪಿಸಿದರು.
ರಾಜ್ಯದಲ್ಲಿ ಇವತ್ತೇ ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಹಾವೇರಿ ಜಿಲ್ಲೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವವರೆಗೂ ವಿರಮಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸೋಣ, ವಿಕಸಿತ ಭಾರತ ಮಾಡಲು ಎಲ್ಲರೂ ಪಯತ್ನ ಪಡೋಣ ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಪೂಜಾರ, ಮಾಜಿ ಶಾಸಕ ವೀರುಪಾಕ್ಷಪ್ಪ ಬಳ್ಳಾರಿ, ಯುವ ಮುಖಂಡರಾದ ಭರತ್ ಬೊಮ್ಮಾಯಿ, ಭೋಜರಾಜ ಕರೂದಿ, ಮಂಜುನಾಥ ಓಲೇಕಾರ, ನಂಜುಡೇಶ ಕಳ್ಳೇರ, ಸಂತೋಷ ಆಲದಕಟ್ಟಿ, ಶೋಭಾ ನಿಸ್ಸಿಮಗೌಡ್ರ, ಭಾರತಿ ಜಂಬಗಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.