ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅಕ್ರಮ; ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಹಾವೇರಿ: ವೈದ್ಯಕೀಯ ಕಾಲೇಜುಗಳು ಪ್ರಾರಂಭ ಆಗಿರುವುದರಿಂದ, ತನಿಖೆಯು ಮುಂದುವರಿಯಲಿದ್ದರೂ, ಕೆಲಸ ಮಾಡಿರುವ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಷರತ್ತುಬದ್ಧವಾಗಿ ತನಿಖೆ ವರದಿಯನ್ನು ನಿರೀಕ್ಷಿಸಿ ಪಾವತಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಲೇಜುಗಳ ಕಾಮಗಾರಿ ನಿಲ್ಲಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ರಾಜ್ಯದ 4 ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಆಗಿರಬಹುದಾದ ಅಕ್ರಮದ ತನಿಖೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು.
ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಉದ್ದೇಶ ನಮ್ಮ ಸರ್ಕಾರಕ್ಕಿದೆ. ಆದ್ದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಶಿಕ್ಷಿಸುವ ಕೆಲಸವನ್ನು ಮಾಡುತ್ತೇವೆ ಎಂದರು.
ಹಿಂದುಳಿದ ವರ್ಗಗಳ ವಸತಿ ನಿಲಯಗಳಿಗೆ ಅಕ್ಕಿ ಕೊರತೆ ಇಲ್ಲ. ಹಾಸ್ಟೆಲ್ ಗಳಿಗಾಗಲಿ, ಫಲಾನುಭವಿಗಳಿಗಾಗಲಿ ನೀಡುವ ಅಕ್ಕಿ ಸರಬರಾಜಿಗೆ ಕೊರತೆ ಸಮಸ್ಯೆ ಇಲ್ಲ ಎಂದು ಹೇಳಿದರು.
ತುಂಗಭದ್ರಾ ನದಿದಂಡೆಯಲ್ಲಿ ಮರಳು ದಂಧೆ ನಡೆಯುತ್ತಿದ್ದಲ್ಲಿ ಅದಕ್ಕೆ ಕಾರಣಕರ್ತರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳು ದಂಧೆಯನ್ನು ನಿಲ್ಲಿಸಲಾಗುವುದು ಎಂದು ತಿಳಿಸಿದರು.