ಶಿಗ್ಗಾಂವಿ ಉಪ ಚುನಾವಣೆ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ ; ಪಕ್ಷೇತರ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ
ಮನವೊಲಿಕೆ ವಿಫಲ ; ಝಮೀರ್ ಅಹ್ಮದ್ ಬಂದಿದ್ದ ಕಾರಿಗೆ ಕಲ್ಲೆಸೆದ ಖಾದ್ರಿ ಬೆಂಬಲಿಗರು
ಹಾವೇರಿ: ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್, ತಮಗೆ ಟಿಕೆಟ್ ಸಿಗುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಮಣೆ ಹಾಕಿತ್ತು.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಖಾದ್ರಿ, ಇಂದು(ಅ.25) ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದರು.
ಮಾಜಿ ಶಾಸಕ ಮಂಜುನಾಥ್ ನಾಮಪತ್ರ ಸಲ್ಲಿಕೆ :
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ದ ಬಂಡಾಯ ಎದ್ದು ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ, ಮತ್ತೊಂದು ಮಾಜಿ ಶಾಸಕ ಮಂಜುನಾಥ್ ಕುನ್ನೂರು ಸಹ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಕಲ್ಲೆಸೆದ ಖಾದ್ರಿ ಬೆಂಬಲಿಗರು
ಶಿಗ್ಗಾಂವಿ ಟಿಕೆಟ್ ವಂಚಿತ ಅಜ್ಜಂ ಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮುಂದಾದ್ದರಿಂದ ಸಚಿವರಾದ ಝಮೀರ್ ಅಹ್ಮದ್ ಖಾನ್, ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅನ್ವರ್ ಬಾಷಾ ಅವರೊಂದಿಗೆ ಖಾದ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಮನವೊಲಿಸಲು ಯತ್ನಿಸಿದ್ದರು.
ಈ ಮಧ್ಯೆ ಅಸಮಾಧಾನಗೊಂಡಿದ್ದ ಬೆಂಬಲಿಗರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಆದರೆ, ಇದಕ್ಕೆ ಬಗ್ಗದ ಅಜ್ಜಂಪೀರ್ ಖಾದ್ರಿ ಬೆಂಬಲಿಗರು, ಸಚಿವ ಝಮೀರ್ ಅಹ್ಮದ್ ಖಾನ್ ಅವರು ಬಂದಿದ್ದ ಕಾರಿಗೆ ಹುಲಗೂರು ಗ್ರಾಮದಲ್ಲಿ ಕಲ್ಲೆಸೆದಿದ್ದಾರೆ ಎಂದು ತಿಳಿದು ಬಂದಿದೆ.
ಖಾದ್ರಿ ಅವರ ಮನ ಒಲಿಸಲು ಸಚಿವ ಝಮೀರ್ ಅಹ್ಮದ್ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಅವರ ಕಾರಲ್ಲಿ ಹೋಗಿದ್ದರು. ಈ ವೇಳೆ ಅಜ್ಜಂಪೀರ್ ಖಾದ್ರಿ ಅಭಿಮಾನಿಗಳು ಕಾರಿನ ಗಾಜು ಒಡೆದಿದ್ದಾರೆ ಎಂದು ತಿಳಿದು ಬಂದಿದೆ.