ಫೆಲೆಸ್ತೀನ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ಗಾಝಾ ಬಿಕ್ಕಟ್ಟಿನ ಬಗ್ಗೆ ಕಳವಳ
ಶಾಂತಿ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ
Photo:X/@narendramodi
ಅಮೆರಿಕ: ಪ್ರಧಾನಿ ನರೇಂದ್ರ ಮೋದಿ ರವಿವಾರ ಫೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿ ಗಾಝಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಈ ಪ್ರದೇಶದಲ್ಲಿ ಶಾಂತಿ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.
ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವೇಳೆ ಫೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ಮತ್ತು ಮೋದಿಯ ನಡುವೆ ಭೇಟಿ ನಡೆದಿದೆ. ಫೆಲೆಸ್ತೀನ್ ನೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸುವ ದೃಷ್ಟಿಯಿಂದ ಮಾತುಕತೆಯನ್ನು ನಡೆಸಲಾಗಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪ್ರಧಾನಿ ಮೋದಿ ಗಾಝಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಫೆಲೆಸ್ತೀನ್ ಜನರಿಗೆ ಭಾರತದ ನಿರಂತರ ಬೆಂಬಲವನ್ನು ಪುನರುಚ್ಚರಿಸಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಅವರು ನ್ಯೂಯಾರ್ಕ್ಗೆ ತೆರಳಿದ್ದರು.