ಸೆ.17ರಂದು ಕಲಬುರಗಿಯಲ್ಲಿ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಬೆಳಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂಗತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆ.17ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.
ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು, ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದರು.
ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಮ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.