ನಿಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವ ಬಿಜೆಪಿಗೆ ಮತ ಹಾಕಬೇಡಿ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಜನಸಾಮಾನ್ಯರು ಕಷ್ಟದಲ್ಲಿದ್ದಾರೆ. ಅವರಿಗೆ ಹಣಕಾಸಿನ ಸಹಾಯವಾಗಲಿ ಎಂದು ಗ್ಯಾರಂಟಿ ಯೋಜನೆಗಳ ಮೂಲಕ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರವನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಸನ್ನತಿ ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು.
ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ. ಅಧಿಕಾರದಲ್ಲಿದ್ದಾಗ ಜನರ ತೆರಿಗೆ ದುಡ್ಡನ್ನು ತಮ್ಮ ಜೇಬಿಗಿಳಿಸಿಕೊಂಡಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಮೂಲಕ ಜನರ ತೆರಿಗೆ ದುಡ್ಡನ್ನು ಜನರಿಗೆ ವಾಪಸ್ ನೀಡಿದ್ದನ್ನು ಸಹಿಸಿಕೊಳ್ಳದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ನಡೆಸಿ, ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ. ನಿಮ್ಮ ಸಂಕಷ್ಟಗಳಿಗೆ ಮಿಡಿಯದ, ನಿಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವ ಬಿಜೆಪಿಗೆ ನೀವು ಮತ ಹಾಕಬಾರದು. ಬದಲಿಗೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತನೀಡಿ ಎಂದು ಮನವಿ ಮಾಡಿದರು.