ತೊಗರಿ ಖರೀದಿ | ಮಾ.18ರವರೆಗೆ ನೋಂದಣಿ, ಎ.2ರವರೆಗೆ ಮಾರಾಟಕ್ಕೆ ಅವಕಾಶ : ಡಿ.ಸಿ. ಫೌಝಿಯಾ ತರನ್ನುಮ್

ಕಲಬುರಗಿ : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ರೈತರಿಂದ ಖರೀದಿಸಲು ಜಿಲ್ಲೆಯಲ್ಲಿ ಈಗಾಗಲೇ ನೋಂದಣಿ ಮತ್ತು ಮಾರಾಟ ಪ್ರಕ್ರಿಯೆ ನಡೆದಿದ್ದು, ನೊಂದಣಿಗೆ ಮಾರ್ಚ್ 18 ಮತ್ತು ಮಾರಾಟಕ್ಕೆ ಎಪ್ರಿಲ್ 2 ಕೊನೆ ದಿನವಾಗಿರುವುದರಿಂದ ಇದೂವರೆಗೆ ನೊಂದಣಿ ಮಾಡದ ರೈತರು ಕೂಡಲೇ ನೋಂದಣಿ ಮಾಡಿಸಿ ಯೋಜನೆಯ ಲಾಭ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮನವಿ ಮಾಡಿದ್ದಾರೆ.
ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 7,550 ರೂ. ದರ ನಿಗದಿ ಮಾಡಿದ್ದು, ಇದಕ್ಕೆ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ 450 ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್‌ಗೆ 8,000 ರೂ. ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಖರೀದಿಸಲಾಗುತ್ತದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಡಿ.ಸಿ. ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.
ಇನ್ನು ತೊಗರಿ ಖರೀದಿಗೆ ಕೇಂದ್ರ ಸರ್ಕಾರವು ನಾಫೆಡ್ ಮತ್ತು ಎನ್.ಸಿ.ಸಿ.ಎಫ್ ಸಂಸ್ಥೆಗಳನ್ನು ಖರೀದಿ ಸಂಸ್ಥೆಗಳನ್ನಾಗಿ ಮಾಡಿದ್ದು, ರಾಜ್ಯದಿಂದ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದೆ. ಅದರಂತೆ ಕಲಬುರಗಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ರೈತ ಉತ್ಪಾದಕರ ಸಂಘಗಳು ಹಾಗೂ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳನ್ನು ಗುರುತಿಸಿ 196 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಸಂಸ್ಥೆಗೆ 62 ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಗೆ ಸಂಸ್ಥೆಗೆ 131 ಖರೀದಿ ಕೇಂದ್ರಗಳನ್ನು ಹಂಚಿಕೆ ಮಾಡಲಾಗಿದ್ದು, ಇವರಿಂದ ಕ್ರಮವಾಗಿ 3,874 ಮತ್ತು 9,381 ಸೇರಿ ಇದೂವರೆಗೆ ಜಿಲ್ಲೆಯಲ್ಲಿ 13,255 ರೈತರು ತೊಗರಿ ಮಾರಾಟಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ