ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಪ್ರಕರಣ: ನಾಲ್ವರ ಬಂಧನ
ಕಲಬುರಗಿ, ಜ.24: ಕೋಟನೂರ (ಡಿ) ಪ್ರದೇಶದ ಲುಂಬಿಣಿ ಉದ್ಯಾನದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್. ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಕಿರಣ್, ಹನುಮಂತ್, ಮಾನು ಮತ್ತು ಸನ್ಮೇಶ್ ಎಂಬವರನ್ನು ಬಂಧಿಸಿ ಮಂಗಳವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದರು.
ಆರೋಪಿಗಳನ್ನು ಪ್ರಾಥಮಿಕ ವಿಚಾರಣೆಗೆ ಒಳಪಡಿಸಿದಾಗ ಗಲಾಟೆ ಉಂಟು ಮಾಡುವ ಉದ್ದೇಶದಿಂದ ಈ ದುಷ್ಕೃತ್ಯ ಎಸಗಿರುವುದು ತಿಳಿದುಬಂದಿದೆ. ಹೆಚ್ಚಿನ ವಿವರಗಳನ್ನು ತನಿಖೆ ಪೂರ್ಣಗೊಂಡ ಬಳಿಕ ನೀಡಲಾಗುವುದು ಎಂದರು.
ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶೋಭಾಯಾತ್ರೆ ಹಾಗೂ ರಾಮನ ಮೂರ್ತಿ ಮೆರವಣಿಗೆ ವೇಳೆ ಗದ್ದಲ ಉಂಟಾದ ಬೆನ್ನಲ್ಲೇ ಕೋಟನೂರು(ಡಿ) ಗ್ರಾಮದಲ್ಲಿರುವ ಲುಂಬಿಣಿ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ದುಷ್ಕೃತ್ಯ ಎಸಗಿದ್ದರು. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.