ಸದಾಶಿವ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಕಲಬುರಗಿ: ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮತ್ತು ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಬಸವರಾಜ ದೇಶಮುಖ ಮತ್ತು ವಿವಿಯ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ನೇತೃತ್ವದ ವಿಶ್ವವಿದ್ಯಾಲಯದ ಅಧಿಕಾರಿಗಳು ಬುಧವಾರ ಸೇಡಂ ಪಟ್ಟಣದಲ್ಲಿ ಕೊತ್ತಲ ಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪೂಜ್ಯ ಶ್ರೀ ಸದಾಶಿವ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಡಿಸೆಂಬರ್ 21 ರಂದು ಕಲಬುರಗಿ ನಗರದಲ್ಲಿ ನಡೆದ ವಿಶ್ವವಿದ್ಯಾಲಯದ 6 ನೇ ಘಟಿಕೋತ್ಸವದಲ್ಲಿ ಶರಣಬಸವ ವಿಶ್ವವಿದ್ಯಾಲಯವು ಬಾಹ್ಯಾಕಾಶ ವಿಜ್ಞಾನಿ ರಾಮನಗೌಡ ವಿ ನಾಡಗೌಡ ಮತ್ತು ಸಿದ್ದಲಿಂಗೇಶ್ವರ ಬುಕ್ ಮಾಲ್ ಮತ್ತು ಪ್ರಕಾಶನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಕೊನೆಕ ಸೇರಿದಂತೆ ಸದಾಶಿವ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿತ್ತು. ಸ್ವಾಮೀಜಿಯವರು ಆ ದಿನ ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬುಧವಾರದಂದು ಸೇಡಂ ಪಟ್ಟಣದಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಅವರು ಸನ್ಮಾನ ಪತ್ರವನ್ನು ಓದಿದರು ಮತ್ತು ಬಸವರಾಜ ದೇಶಮುಖ ಅವರೊಂದಿಗೆ ಶ್ರೀಗಳಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವಿವಿಯ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಹಣಕಾಸು ಅಧಿಕಾರಿ ಪ್ರೊ. ಕಿರಣ್ ಮಾಕಾ ಮತ್ತು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಸೇರಿದಂತೆ ಇತರರು ಉಪಸ್ಥಿತರಿದ್ದರು.