ಕಲಬುರಗಿ | ವೇತನ ಬಿಡುಗಡೆಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ
ಕಲಬುರಗಿ : ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಸರ್ಕಾರಿ ಹಾಸ್ಟೆಲ್ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರಗಿ ನಗರದ ಜಗತ್ ವೃತ್ತದಿಂದ ನೂರಾರು ಜನ ಹೊರ ಗುತ್ತಿಗೆ ಕಾರ್ಮಿಕರು ಪ್ರಾದೇಶಿಕ ಆಯುಕ್ತರ ಕಚೇರಿವರೆಗೆ ತೆರಳಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ʼಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಎರಡ್ಮೂರು ತಿಂಗಳಿಂದ ಸಂಬಳ ನೀಡಿಲ್ಲ. ಇನ್ನೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಗೆ ಏಳೆಂಟು ತಿಂಗಳಿಂದ ಸಂಬಳ ನೀಡಿಲ್ಲ. ಸಂಬಳ ಇಲ್ಲದೆ ದಸರ ಹಬ್ಬ ಆಚರಣೆ ಮಾಡಲಾಗಿದೆ. ಇವಾಗ ದೀಪಾವಳಿ ಹಬ್ಬ ಬರುತ್ತಿದ್ದು, ಕೈಯಲ್ಲಿ ದುಡ್ಡು ಇಲ್ಲದೆ ಜೀವನ ನಡೆಸುವುದು ಕಷ್ಟವಾಗುತ್ತಿದೆʼ ಎಂದು ಅಳಲು ತೋಡಿಕೊಂಡಿದ್ದಾರೆ.
ಹಾಸ್ಟೆಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು. ಬಾಕಿ ವೇತನ ಕೂಡಲೇ ಪಾವತಿಸಬೇಕು, ಅವರಿಗೆ ಕನಿಷ್ಠ 31ಸಾವಿರ ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಪರಶುರಾಮ್ ಹಡಲಗಿ, ಕಾಶಿನಾಥ್ ಬಂಡಿ, ದಾವಲ್ ಸಾಬ್ ನದಾಫ್ ಸೇರಿದಂತೆ ಹಲವು ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.