ಕಲಬುರಗಿ | ಸರಕಾರಿ ಪದವಿ ಕಾಲೇಜುಗಳಲ್ಲಿ ಪತ್ರಿಕೋದ್ಯಮ ಕೋರ್ಸ್ ಆರಂಭಿಸುವಂತೆ ಆಗ್ರಹ
ಕಲಬುರಗಿ : ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಪತ್ರಿಕೋದ್ಯಮ ವಿಷಯವನ್ನು ಐಚ್ಚಿಕ ವಿಷಯವನ್ನಾಗಿ ಪ್ರಾರಂಭಿಸಲು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಸುಭಾಷ ಬಣಗಾರ, ಉಪನ್ಯಾಸಕಿ ಡಾ.ಸುನಿತಾ ಪಾಟೀಲ್ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜಗದೀಶ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮನವಿ ಮಾಡಲಾಗಿತ್ತು. ಈ ಮನವಿಗೆ ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿಗಳು ಪತ್ರ ಬರೆದು ಕ್ರಮಕೈಗೊಳ್ಳುವಂತೆ ಸರಕಾರದ ಶಿಕ್ಷಣ-ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಲಾಗಿತ್ತು. ಆ ಬಳಿಕ ಸಿಎಂ ಸಿದ್ದರಾಮಯ್ಯ ಕಲಬುರಗಿಗೆ ಬಂದ ವೇಳೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಯಾರು ಸಹ ಏನು ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಸಮೂಹ ಮಾಧ್ಯಮಗಳಲ್ಲಿನ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಈ ಬಗ್ಗೆ ವಿಧಾನ ಸಭೆಯ ಅಧಿವೇಶನದಲ್ಲಿ ಗಂಭೀರವಾಗಿ ಚಿಂತನೆ ನಡೆಸಿ ಕೂಡಲೇ ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ, ಕನ್ನಡ, ಇಂಗ್ಲಿಷ್, ಸಮಾಜ ಶಾಸ್ತ್ರದಂತೆ ಪತ್ರಿಕೋದ್ಯಮ ವಿಷಯವನ್ನು ಐಚ್ಚಿಕ ವಿಷಯವನ್ನಾಗಿ ಪ್ರಾರಂಭಿಸಲು ಹಾಗೂ ಅಗತ್ಯವಾದ ಮೂಲಭೂತ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ.ತೀರ್ಥಕುಮಾರ ಬೇಳಕೊಟ, ಡಾ.ಸರದಾರ ರಾಯಪ್ಪ, ನಿಂಗಣ್ಣ ಉದನೂರು ಮತ್ತಿತರರು ಹಾಜರಿದ್ದರು.