ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ʼಕಲಿಕಾಸರೆʼ ಪುಸ್ತಕ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ಎಸೆಸೆಲ್ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಜಿಲ್ಲೆಯ ಸರಕಾರಿ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ "ಕಲಿಕಾಸರೆ" ಪುಸ್ತಕ ವಿತರಿಸಲಾಗುತ್ತಿದ್ದು, ಶನಿವಾರ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ. ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲ್ಲಿನ ಡಿ.ಸಿ ಕಚೇರಿ ಸಭಾಂಗಣದಲ್ಲಿ ನಾಲ್ವರಿಗೆ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.
ಕಲಿಕೆಯಲ್ಲಿ ಹಿಂದುಳಿದ ಸಿ ಮತ್ತು ಸಿ+ಗ್ರೇಡ್ ಸಾಮರ್ಥ್ಯದ ಮಕ್ಕಳನ್ನು ಗುರಿಯಾಗಿಸಿ ಅವರ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಪ್ರಸಕ್ತ 2024-25ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮಂಡಳಿಯ ಪ್ರಾದೇಶಿಕ ನಿಧಿಯಡಿ "ಅಕ್ಷರ ಆವಿಷ್ಕಾರ" ಯೋಜನೆ ಮೂಲಕ ಸುಮಾರು 85 ಲಕ್ಷ ರೂ. ಖರ್ಚು ಮಾಡಿ ಜಿಲ್ಲೆಯ 298 ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡುವ ಉದ್ದೇಶ ಹೊಂದಲಾಗಿದೆ.
9ನೇ ತರಗತಿಯ ವಿದ್ಯಾರ್ಥಿಗಳಿಗೆ 12,107 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 12,633 ಸೇರಿ ಒಟ್ಟು 24,740 ಪುಸ್ತಕ ವಿತರಿಸಲಾಗುತ್ತಿದ್ದು, ಮುಂದಿನ ದಿನದಲ್ಲಿ ಎಲ್ಲಾ ಶಾಲೆಯ ಮಕ್ಕಳಿಗೆ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಉಪ ಆಯುಕ್ತ ಅವಿನಾಶ ಶಿಂಧೆ, ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಇದ್ದರು.