ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮೃಗೀಯ ಕೃತ್ಯ, ಆರೋಪಿಗೆ ಕಠಿಣ ಶಿಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜೇವರ್ಗಿ ತಾಲ್ಲೂಕಿನ ಯಡ್ರಾಮಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಾಲಾ ಶಿಕ್ಷಕನಿಂದ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಯಾವುದೇ ಕಾರಣಕ್ಕೂ ಸಹಿಸಲಾಗದ ಕೃತ್ಯವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಘನತೆಯನ್ನು ಕಾಪಾಡಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದ್ಧತೆ ಹೊಂದಿದೆ. ಯಡ್ರಾಮಿ ಪ್ರಕರಣ ವರದಿಯಾದ ತಕ್ಷಣವೇ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದೊಂದು ಮೃಗೀಯ ಕೃತ್ಯವಾಗಿದ್ದು, ತಪ್ಪಿತಸ್ಥರನ್ನು ಗರಿಷ್ಠ ಶಿಕ್ಷೆಗೆ ಗುರಿಪಡಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದ್ದಾರೆ.
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಘಟನೆಯನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದ್ದು, ತಮ್ಮ ರಾಜಕೀಯ ಅಸ್ತಿತ್ವವನ್ನು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹಿಂಸಾಚಾರದಲ್ಲಿ ತೊಡಗಿ ಕಾನೂನು ಸುವ್ಯವಸ್ಥೆಗೆ ಸವಾಲೆಸೆದು ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳುಗೆಡವುತ್ತಿದ್ದಾರೆ.
ಸಾರ್ವಜನಿಕರಿಗೆ ತೊಂದರೆ ನೀಡುವುದಕ್ಕೆ ಯಾರಿಗೂ ಹಕ್ಕಿಲ್ಲ, ನಮ್ಮ ಸರ್ಕಾರ ಮಹಿಳೆಯರ ರಕ್ಷಣೆಗೆ ಆದ್ಯತೆ ನೀಡುವುದರೊಂದಿಗೆ ಸಾರ್ವಜನಿಕ ಆಸ್ತಿಗಳ ರಕ್ಷಣೆಗೆ, ಸಮಾಜದ ಶಾಂತಿ ಕಾಪಾಡುವುದಕ್ಕೆ ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆಗೂ ಆದ್ಯತೆ ನೀಡುತ್ತದೆ ಎಂದಿದ್ದಾರೆ.
ನಮ್ಮ ಸರ್ಕಾರ ಅತ್ಯಾಚಾರವನ್ನೂ ಸಹಿಸುವುದಿಲ್ಲ, ಹಿಂಸಾಚಾರವನ್ನೂ ಸಹಿಸುವುದಿಲ್ಲ, ಹಿಂಸಾಚಾರ ನಡೆಸುವವರು ಯಾವುದೇ ಸಮುದಾಯದವರಾಗಿದ್ದರೂ ಸರಿ, ಯಾವುದೇ ಜಾತಿ ಧರ್ಮದವರಾಗಿದ್ದರೂ ಸರಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಹಿಂದೇಟು ಹಾಕುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಗರಿಷ್ಠ ಪ್ರಮಾಣದ ಕಾಠಿಣ್ಯತೆ ತೋರಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.