ಯುವಕನ ಹತ್ಯೆಗೈದು ಚಾರ್ಮಾಡಿ ಘಾಟ್ ಬಳಿ ಮೃತದೇಹ ಎಸೆದಿದ್ದ ಪ್ರಕರಣ; ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ
ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ
ಮೂಡಿಗೆರೆ: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸವಾದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಝ್ವಾನ್ ಮತ್ತು ಝೈನುಲ್ಲಾ ಎಂಬವರನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಇಂದು ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸವಾದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.