ಬಿ.ಸಿ.ರೋಡ್ - ಕೈಕಂಬ: ಇತ್ತಂಡಗಳ ನಡುವೆ ಮಾರಾಮಾರಿ, ಓರ್ವನಿಗೆ ಗಾಯ
ಸಾಂದರ್ಭಿಕ ಚಿತ್ರ
ಬಂಟ್ವಾಳ: ರಿಕ್ಷಾ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಸಮುದಾಯದ ರಿಕ್ಷಾ ಚಾಲಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆಯನ್ನು ಬಿಡಿಸಲು ಸ್ಥಳಕ್ಕೆ ಬಂದಿದ್ದ ಸ್ಥಳೀಯ ಮುಖಂಡರೋರ್ವರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೊಲೀಸರು ಚದುರಿಸಿದ ಘಟನೆ ಬಿ.ಸಿ.ರೋಡಿನ ಕೈಕಂಬದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಘಟನೆಯ ವಿವರ
ಬಿ.ಸಿ.ರೋಡಿನ ಕೈಕಂಬದಲ್ಲಿ ರಿಕ್ಷಾ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಈ ಪೈಕಿ ಓರ್ವ ಮತ್ತೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಪ್ರತಿಯಾಗಿ ಹಲ್ಲೆಗೊಳಗಾದ ವ್ಯಕ್ತಿಯ ಪರವಾಗಿ ಕೆಲವು ಮಂದಿ ಸೇರಿ ಗುಂಪು ಹಲ್ಲೆ ನಡೆಸಲು ಮುಂದಾದಾಗ ಮತ್ತೋರ್ವನ ಪರವಾಗಿ ಜನ ಜಮಾಯಿಸಿ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳೀಯ ಮುಖಂಡರೋರ್ವರು ಮಧ್ಯ ಪ್ರವೇಶಿಸಿದ್ದು ಈ ಸಂದರ್ಭ ಅವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಎರಡು ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಎರಡು ಗುಂಪಿನ ಸದಸ್ಯರು ಸ್ಥಳದಿಂದ ಕಾಲ್ಕಿತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಬಂಟ್ವಾಳ ನಗರ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಬಗ್ಗೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.