ಬ್ರಹ್ಮಾವರ: ಲೋಕಾಯುಕ್ತದಿಂದ ಅಹವಾಲು ಸ್ವೀಕಾರ
ಉಡುಪಿ, ಜು.12: ಉಡುಪಿ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಬ್ರಹ್ಮಾವರ ತಾಲೂಕು ಸಾರ್ವಜನಿಕ ಅಹವಾಲು ಕಾರ್ಯಕ್ರಮ ಇಂದು ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 10 ಅಹವಾಲುಗಳನ್ನು ಸ್ವೀಕರಿಸಲಾಗಿದ್ದು, ಇವುಗಳಲ್ಲಿ 9ನ್ನು ಸ್ಥಳದಲ್ಲಿ ಇತ್ಯರ್ಥಪಡಿಸಲಾಯಿತು. ಒಂದು ದೂರು ಅರ್ಜಿಗೆ ಸಂಬಂಧಿಸಿದಂತೆ ಪ್ರಪತ್ರ1, 2ನ್ನು ನೀಡಲಾಯಿತು.
ಸಾರ್ವಜನಿಕರ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೇ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಹಾಗೂ ಸೂಕ್ತ ಕಾರಣವಿಲ್ಲದೇ ತಿರಸ್ಕರಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಮಳೆಗಾಲ ಪ್ರಾರಂಭವಾಗಿದ್ದು, ಜೋರಾಗಿ ಮಳೆ ಬಂದು ಪ್ರವಾಹ ಉಂಟಾಗಿ ಜೀವಹಾನಿ ಹಾಗೂ ಬೆಳೆಹಾನಿ ಉಂಟಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಹಾಗೂ ಪರಿಹಾರ ನೀಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಸಾಂಕ್ರಮಿಕ ಕಾಯಿಲೆಗಳು ಹರಡುವ ಸಾಧ್ಯತೆಯಿರುವುದರಿಂದ ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸರ್ವೆ ಇಲಾಖೆಯಿಂದ ಸರ್ವೆ ವಿಳಂಬವಾಗುತ್ತಿರುವ ಬಗ್ಗೆ ಹಾಗೂ ನಕ್ಷೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆಗಾಲದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆಯಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆ ಯಾಗಿ ಜೀವಹಾನಿಯಾಗುವ ಸಾಧ್ಯತೆಯಿರುವುದರಿಂದ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ಕೆ.ಸಿ., ಪೊಲೀಸ್ ನಿರೀಕ್ಷಕ ಜಯರಾಮ ಡಿ.ಗೌಡ, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ, ಲೋಕೋಪ ಯೋಗಿ ಇಲಾಖೆಯ ಸಹಾಯಕ ಅಭಿಯಂತರ ಮಂಜುನಾಥ ಶೇಪೂರ, ಬ್ರಹ್ಮಾವರ ಎಡಿಎಲ್‌ಆರ್ ತಿಪ್ಪರಾಯ ತೊರ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ ನಾಯ್ಕ, ಚಾಂತಾರು ಪಿಡಿಓ ಸತೀಶ ನಾಯ್ಕ್, ಬ್ರಹ್ಮಾವರ ತಾಲೂಕು ಪಂಚಾಯತ್ ಯೋಜನಾಧಿಕಾರಿ ಸಂದೇಶ್ ಶೆಟ್ಟಿ, ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ, ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭಟ್, ಬ್ರಹ್ಮಾವರ ತೋಟಗಾರಿಕೆ ಅಧಿಕಾರಿ ಮಹಾಂತೇಶ ಕಾಂಬಳೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯ ಹಿರಿಯ ಮೇಲ್ವಿಚಾರಕಿ ಭಾಗಿರಥಿ ಆಚಾರ್ಯ, ಮೆಸ್ಕಾಂ ಸಹಾಯಕ ಅಭಿಯಂತರ ಅಶೋಕ್ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಬಿ.ಬಿ, ಬ್ರಹ್ಮಾವರ ಪಶು ಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರದೀಪ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.