ಮಾದಕ ವಸ್ತುಗಳ ದುಷ್ಪರಿಣಾಮ ಬಗ್ಗೆ ಪಠ್ಯದಲ್ಲಿ ಅಳವಡಿಸಬೇಕು: ನ್ಯಾ. ಶರ್ಮಿಳಾ ಎಸ್.
ಉಡುಪಿ, ಜೂ.26: ಇಂದಿನ ಯುವಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದದ ಸಂಗತಿ. ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ತಡೆಯಲು ಪಠ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪಾಠಗಳನ್ನು ಅಳವಡಿಸಬೇಕು. ಮಕ್ಕಳಿಗೆ ಸರಿಯಾದ ಮಾಹಿತಿ ನೀಡುವುದರಿಂದ ಈ ಸಮಸ್ಯೆಯನ್ನು ಹೋಗಲಾಡಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಹಾಗೂ ಮಣಿಪಾಲ ಮಹಿಳಾ ಸಮಾಜಗಳ ಸಹಯೋಗದಲ್ಲಿ ನಡೆದ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತಿನಲ್ಲಿ ಸುಮಾರು 200 ಮಿಲಿಯನ್ ಜನರು ಮಾದಕ ವ್ಯಸನದಿಂದ ಬಳಲುತ್ತಿದ್ದಾರೆ. ಆಲ್ಕೋಹಾಲ್, ಸಿಗರೇಟ್, ತಂಬಾಕು, ಡ್ರಗ್ಸ್, ಅಫೀಮು, ಕೊಕೈನ್ನಂತಹ ಮಾದಕ ದ್ರವ್ಯಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದ್ದು, ದುಷ್ಪರಿಣಾಮಗಳ ಅರಿದ್ದರೂ ಕೂಡ ಯುವಜನತೆ ವ್ಯಸನಿಗಳಾಗಿಅದರಿಂದ ಹೊರಬರಲಾಗದೆ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇದರಿಂದಾಗುವ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳು ಬೇಕು ಹಾಗೂ ಪಠ್ಯಕ್ರಮದಲ್ಲಿ ಪಾಠಗಳನ್ನು ಅವುಗಳನ್ನು ಅಳವಡಿಸಬೇಕು. ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುವುದರಿಂದ ದೇಶದ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವ್ಯಸನಗಳ ಬಗ್ಗೆ ಪ್ರತಿದಿನ ಪ್ರಕರಣಗಳು ದಾಖಲಾಗುತ್ತಿವೆ. ಸಾಮಾನ್ಯವಾಗಿ ಮನೆಯಿಂದ ಹೊರ ಉಳಿದವರು, ಸ್ನೇಹಿತರ ಜೊತೆಗೂಡದವರು ಅಥವಾ ಮಾನಸಿಕ ನೋವು ಅನುಭವಿಸುವ ವ್ಯಕ್ತಿಗಳು ಮಾದಕ ವ್ಯಸನಿಗಳಾಗುತ್ತಾರೆ. ಚಿಕ್ಕ ಮಕ್ಕಳಿಂದ ಹಿಡಿದು ಯುವಕರು, ವಿದ್ಯಾವಂತರು, ಬುದ್ದಿವಂತರೇ ಇಂತಹ ಚಟಗಳಿಗೆ ಮಾರು ಹೋಗುತ್ತಿದ್ದಾರೆ. ಇದರಿಂದ ಸಮಾಜಕ್ಕೆ, ಕುಟುಂಬಗಳಿಗೆ ಮತ್ತು ದೇಶದ ಭದ್ರತೆಗೂ ದಕ್ಕೆ ತರುವಂತಹ ಸಮಸ್ಯೆ ಆಗುತ್ತಿದೆ. ಮಾದಕ ವ್ಯಸನದಿಂದ ಹೊರಬರಲು ಕ್ರೀಡೆ, ಕಲೆ, ಈಜು ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಮತ್ತು ಉಡುಪಿ- ಕರಾವಳಿ ಐಎಂಎ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿಮ್ಹಾನ್ಸ್ ಬೆಂಗಳೂರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ಆರಂಭಿಸಿರುವ ಟೆಲಿಮನಸ್ ಶುಲ್ಕ ರಹಿತ ಸಹಾಯವಾಣಿ (14416)ಯನ್ನು ಲೋಕಾರ್ಪಣೆ ಗೊಳಿಸಲಾಯಿತು.
ಮಾದಕ ದ್ರವ್ಯ ವ್ಯಸನದಿಂದ ದೂರವಿರುವ ಕುರಿತಂತೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಪ್ತ ಸಮಾಲೋಚಕಿ ಪದ್ಮಾ ರಾಘವೇಂದ್ರ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಸುದೇಶ್ ಕುಮಾರ್, ಎ.ವಿ.ಬಾಳಿಗಾ ಆಸ್ಪತ್ರೆಯ ಡಾ.ಸುಲತಾ ಭಂಡಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಉಡುಪಿ-ಕರಾವಳಿ ಐಎಂಎ ಕಾರ್ಯದರ್ಶಿ ಹಾಗೂ ಕೀಲು, ಮೂಳೆ ತಜ್ಞ ಡಾ.ಕೇಶವ್ ನಾಯಕ್, ಜಿಲ್ಲಾ ವಿಕಲಚೇತನ ಅಧಿಕಾರಿ ರೋಶನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಸ್ವಾಗತಿಸಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಲತಾ ನಾಯಕ್ ವಂದಿಸಿದರು.