ಉದ್ಯೋಗ ಸೃಷ್ಠಿಗೆ ಹೆಚ್ಚಿನ ಆದ್ಯತೆ : ಸಚಿವ ದಿನೇಶ್ ಗುಂಡೂರಾವ್
"ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಬೇಕಾಗಿದೆ"
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಿಕ್ಷಣ ಪಡೆದವರಿಗೆ ಇಲ್ಲಿಯೇ ಉದ್ಯೋಗ ಪಡೆದು ನೆಲೆಸುವ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಆಶ್ರಯದಲ್ಲಿ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ಅಂತಾರ್‌ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ದೇಶದ ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಬಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದು ವಾಪಸಾಗುತ್ತಾರೆ. ಆದರೆ ಅವರಿಗೆ ಇಲ್ಲಿ ಉದ್ಯೋಗಾವಕಾಶ ಇಲ್ಲ. ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಬೇಕಾಗಿದೆ. ಮುಂದೆ ಉದ್ಯೋಗದ ಸೃಷ್ಠಿಗೆ ಆದ್ಯತೆ ನೀಡಲಾಗುವುದು. ನೂತನ ಜಿಲ್ಲಾಧಿಕಾರಿ ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡಲಾರೆ ಎಂದ ಅವರು ಸಾಮಾಜಿಕ ಸಾಮರಸ್ಯಕ್ಕೆ ಒತ್ತು ನೀಡಲಾಗುವುದು ಎಂದರು. ದುಶ್ಚಟಗಳಿಗೆ ಬಲಿಯಾದರೆ ಅದರಿಂದ ಹೊರಬರುವುದು ಕಷ್ಟ. ಆದ ಕಾರಣ ಇದರ ಬಗ್ಗೆ ಎಚ್ಚರವಹಿಸಬೇಕು.ಡ್ರಗ್ಸ್‌ನಿಂದ ದೂರವಿರಬೇಕು ಮತ್ತು ವ್ಯಸನಿಗಳ ಮನಪರಿವರ್ತನೆಗೆ ಶ್ರಮಿಸಬೇಕು ಎಂದು ಹೇಳಿದರು.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ರೆ.ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಇದೇ ಸಂದರ್ಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸದಸ್ಯ ಐವನ್ ಡಿ ಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಡಾ.ಶಿವಶಂಕರ್‌ಎ.ಆರ್.ಸ್ವಾಗತಿಸಿದರು. ಡಾ.ಹರೀಶ್‌ಗೌಡ ವಂದಿಸಿದರು.