ಕೋವಿಡ್ 19 ಭೀತಿ: ಕೊಡಗಿನ ಗಡಿಯಲ್ಲಿ ತೀವ್ರ ತಪಾಸಣೆ
ಮಡಿಕೇರಿ: ಕೇರಳ ರಾಜ್ಯದಲ್ಲಿ ಕೊರೋನಾ ರೂಪಾಂತರಿಯ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಗಡಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದೆ.
ಆರೋಗ್ಯ ಸಿಬ್ಬಂದಿಗಳು ಗಡಿ ಗೇಟುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೇರಳದಿಂದ ಬರುತ್ತಿರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಮೊದಲ ಹಂತವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ.
ಕುಟ್ಟ, ಮಾಕುಟ್ಟ, ಕರಿಕೆ ಹಾಗೂ ಸಂಪಾಜೆ ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೇರಳದಿಂದ ಕೊಡಗಿಗೆ ಆಗಮಿಸುವವರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.
ಕೊರೋನಾ ರೂಪಾಂತರಿ ಬಗ್ಗೆ ಎಚ್ಚರ ವಹಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಭೋಸರಾಜು ಅವರು ಸೂಚನೆ ನೀಡಿದ್ದು, ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳು ಪೂರಕ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗಡಿಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಕೊರೋನಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.