ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ : ಸಚಿವ ಎನ್.ಎಸ್.ಭೋಸರಾಜು
ಮಡಿಕೇರಿ ಕೋಟೆಯಲ್ಲಿ ಸಂಭ್ರಮದ ʼಕನ್ನಡ ರಾಜ್ಯೋತ್ಸವʼ ಆಚರಣೆ
ಎನ್.ಎಸ್.ಭೋಸರಾಜು
ಮಡಿಕೇರಿ : ಕನ್ನಡ, ಕರ್ನಾಟಕ, ಕರುನಾಡು ಎಂಬುವುದು ಕೇವಲ ನೆಲ ಮತ್ತು ಭಾಷೆಯಲ್ಲ, ಅದೊಂದು ಭಾವನೆ ಮತ್ತು ಬಾಂಧವ್ಯವಾಗಿದೆ. ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕರೆ ನೀಡಿದ್ದಾರೆ.
ಜಿಲ್ಲಾಡಳಿತದ ವತಿಯಿಂದ ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಮಹನೀಯರ ಸ್ಮರಿಸಿಕೊಳ್ಳುವುದು ಅವಶ್ಯವೆಂದರು.
21ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನೀಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ, ಆದ್ದರಿಂದ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವೆಲ್ಲರು ಸೇರಿ ಮಾಡಬೇಕೆಂದು ಕರೆ ನೀಡಿದರು.
ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ‘ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಹಾಗೂ ಯುವಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆಯೆಂದು ತಿಳಿಸಿದರು.
ಯುವ ಸಮೂಹ ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಳ್ಳುತ್ತಿದ್ದು, ಹಲವು ‘ಗ್ಯಾರಂಟಿ ಯೋಜನೆ’ಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಜನರ ಮನ ಗೆದ್ದಿದೆಯೆಂದು ವಿಶ್ವಾಸದಿಂದ ನುಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಡಾ.ಮಂತರ್ ಗೌಡ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ತಹಶಿಲ್ದಾರರಾದ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.