ಕೋವಿಡ್ ರೂಪಾಂತರಿ ತಳಿ ಮುನ್ನೆಚ್ಚರಿಕೆ ವಹಿಸಿ: ಕೊಡಗು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಬೋಸರಾಜು ಸೂಚನೆ
ಬೆಂಗಳೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ರವಿವಾರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ರೂಪಾಂತರಿ ಕರೋನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು.
ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು. ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು.
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನ ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಅವರು ನಿರ್ದೇಶನ ನೀಡಿದ್ದಾರೆಂದು ಪ್ರಕಟಣೆ ತಿಳಿಸಿದೆ.