ಮರಕುಂಬಿ ಅಸ್ಪೃಶ್ಯತೆ ಪ್ರಕರಣ: 101 ಮಂದಿ ವಿರುದ್ಧದ ಆರೋಪ ಸಾಬೀತು; ಅ.24ರಂದು ಶಿಕ್ಷೆ ಪ್ರಕಟ
♦♦ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ತೀರ್ಪು ♦♦ 100 ಮಂದಿ ಆರೋಪಿಗಳ ಬಂಧನ
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಕೊಪ್ಪಳ/ಗಂಗಾವತಿ: ಸುಮಾರು 9 ವರ್ಷಗಳ ಹಿಂದೆ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಮತ್ತು ನಂತರ ದಲಿತರ ಓಣಿಗೆ ನುಗ್ಗಿ ದಲಿತ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿಯ ವಿರುದ್ದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈ ಪ್ರಕರಣದ ತೀರ್ಪು ಕಾಯ್ದಿರಿಸಿದೆ.
ಈ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 24ರಂದು ಪ್ರಕಟಿಸಲು ಕಾಯ್ದಿರಿಸಿದ್ದಾರೆ.
ಏನಿದು ಪ್ರಕರಣ
2014ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್ ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ ವಿಚಾರವಾಗಿ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು. ಇದೇ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಹಲ್ಲೆ ಕೂಡಾ ನಡೆಸಿದ್ದರು. ಇದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮದ 117 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ಪ್ರಕರಣ ದಾಖಲಾಗಿತ್ತು, ಈ ನಡುವೆ ಕೆಲ ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ 101 ಮಂದಿಯ ವಿರುದ್ಧ ಅರೋಪ ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದ 100 ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇನ್ನೊಬ್ಬ ವಿಚಾರಣೆಗೆ ಹಾಜರಾಗಿರದ ಕಾರಣ ಆತನ ಬಂಧನ ಆಗಿಲ್ಲ. ಆತನ ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.