ಅಗತ್ಯ ಬಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೇ ಬಂಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದಾರೆ.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನ್ನ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿಯವರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯ ಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದರು.
ಆದರೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದರೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.