ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ
ಬೆಂಗಳೂರು: ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್(76) ಸೋಮವಾರ ಮುಂಜಾನೆ 1.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂತ್ರಕೋಶದ ಸೋಂಕಿನ ಕಾರಣ ಅವರನ್ನು ಎ.22ರಂದು ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಶ್ರೀನಿವಾಸ ಪ್ರಸಾದ್, ಮಣಿಪಾಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರು ಪತ್ನಿ ಭಾಗ್ಯಲಕ್ಷ್ಮಿ, ಪುತ್ರಿಯರಾದ ಪ್ರತಿಮಾ, ಪೂರ್ಣಿಮಾ, ಪೂನಂ ಹಾಗೂ ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಪ್ರಸಾದ್ರ ಪಾರ್ಥೀವ ಶರೀರವನ್ನು ಮೈಸೂರಿನ ಜಯಲಕ್ಷ್ಮಿಪುರಂನ ಅವರ ನಿವಾಸಕ್ಕೆ ತಂದು ಮಧ್ಯಾಹ್ನದ ವರೆಗೂ ಅಲ್ಲಿ ಪಾರ್ಥೀವ ಶರೀರವನ್ನು ಇಡಲಾಗಿತ್ತು. ನಂತರ ಅಶೋಕಪುರಂನ ಎಂಟಿಎಂ ಶಾಲೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ.
ನಾಳೆ(ಎ.30)) ಮೈಸೂರಿನ ಅಶೋಕಪುರಂನಲ್ಲಿ ಶ್ರೀನಿವಾಸ ಪ್ರಸಾದ್ ಅವರ ಪಾರ್ಥೀವ ಶರೀರದ ಮೆರವಣಿಗೆ ನಡೆಸಿ ಬಳಿಕ ಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪ್ರಸಾದ್ ಅವರ ಕುಟುಂಬದ ಮೂಲಗಳು ತಿಳಿಸಿವೆ.
ರಾಜ್ಯಶಾಸ್ತ್ರದಲ್ಲಿ ಎಂ.ಎ. ಮಾಡಿದ್ದ ಶ್ರೀನಿವಾಸ ಪ್ರಸಾದ್ 1974ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆ ಹಾಗೂ 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. 1980ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1984, 1989, 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದರು. 1999ರಲ್ಲಿ ಜೆಡಿಯು ಅಭ್ಯರ್ಥಿಯಾಗಿ, 2019ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
2008 ಹಾಗೂ 2013ರಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2017ರಲ್ಲಿ ಸಚಿವ ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಅನಾರೋಗ್ಯ ನೆಪದಲ್ಲಿ ಸಚಿವ ಸಂಪುಟದಿಂದ ಕೈಬಿಟ್ಟಿದ್ದರಿಂದ ಬೇಸರಗೊಂಡ ಶ್ರೀನಿವಾಸ ಪ್ರಸಾದ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರು. 2018ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
ಬಿಜೆಪಿಯಿಂದ ಈ ಬಾರಿ ಟಿಕೆಟ್ ನೀಡಿರಲಿಲ್ಲ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಸಾದ್ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ರ ಭೇಟಿ ಕುತೂಹಲ ಕೆರಳಿಸಿತ್ತು. ಆದರೆ, ಇದೀಗ ಶ್ರೀನಿವಾಸ್ ಪ್ರಸಾದ್ ಅಗಲಿಕೆ ಅವರ ಬೆಂಬಲಿಗರಿಗೆ ಆಘಾತ ನೀಡಿದೆ.
ಗಣ್ಯರ ಸಂತಾಪ: ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ‘ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ತಿಳಿಸಿದ್ದಾರೆ.
ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಸೂಚಿಸಿದ್ದು, ‘ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಪ್ರಸ್ತುತ ಕಾಲಮಾನದಲ್ಲಿ ಪ್ರಸಾದ್ರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ’ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.