ಚಿಕ್ಕಬಳ್ಳಾಪುರ: ಪ್ರತಿಭಟನಾ ನಿರತ ರೈತರಿಗೆ ಗುಂಡಿಕ್ಕಿದ ಗಣಿ ಮಾಲಕ; ಇಬ್ಬರಿಗೆ ಗಂಭೀರ ಗಾಯ

ಗೌರಿಬಿದನೂರು: ಕಲ್ಲು ಕ್ವಾರಿ ಕ್ರಷರ್ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಲ್ಲು ಗಣಿಗಾರಿಕೆ ಮಾಲಕನೋರ್ವ ಗುಂಡಿಕ್ಕಿದ ಅಘಾತಕಾರಿ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲ್ಲು ಗಣಿಗಾರಿಕೆ ನಡೆಸಲು ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿರುವ ಸಂದರ್ಭದಲ್ಲಿ ರಸ್ತೆಯ ವಿಚಾರದಲ್ಲಿ ಮಾತಿಗೆ ಮಾತು ಬೆಳೆದ ಸಂದರ್ಭ ಬೆಂಗಳೂರಿನ ಸಕಲೇಶ್ ಕುಮಾರ್ ಎಂಬಾತ ಪ್ರತಿಭಟನಾ ನಿರತ ರೈತರ ಮೇಲೆ ಗುಂಡಿಕ್ಕಿದ್ದಾನೆ ಎಂದು ಆರೋಪಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಕಲ್ಲು ಗಣಿಗಾರಿಕೆ ವಿರುದ್ಧ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಬುಧವಾರ ಮಧ್ಯಾಹ್ನವೂ ಪ್ರತಿಭಟನೆ ನಡೆಸಿದ ರೈತರ ಮೇಲೆ ಕ್ರಷರ್ ಮಾಲಕ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಆರೋಪಿಯ ಬಂಧನಕ್ಕೆ ಆಗ್ರಹಿಸಿ ರೈತರು ಪೋಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.