ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‍ನಿಂದ ಉಚ್ಚಾಟನೆ
ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣದ ಆರೋಪಿ ಆರಸ್ಸೆಸ್ ಮುಖಂಡ ಪ್ರಭಾಕರ ಭಟ್ ಅವರ ಪರ ವಕಾಲತ್ತು ವಹಿಸಿರುವ ವಕೀಲ ಡಿ.ಚಂದ್ರೇಗೌಡ ಅವರನ್ನು ಶ್ರೀರಂಗಪಟ್ಟಣ ತಾಲೂಕು ಕಾಂಗ್ರೆಸ್‍ನ ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ.
ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಡಿ.ಚಂದ್ರೇಗೌಡ ನಿರೀಕ್ಷಣಾ ಜಾಮೀನು ಕೊಡಿಸಿದ್ದಾರೆ. ಇದು ಪಕ್ಷದ ಕಾನೂನು ಘಟಕದ ನಿಯಮ, ನಿಬಂಧನೆಗಳಿಗೆ ವಿರುದ್ಧವಾಗಿರುವ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಜಿಲ್ಲಾಧ್ಯಕ್ಷ ಎ.ಎಸ್.ಗೌರಿಶಂಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ಹಿನ್ನಲೆ
ಡಿ. 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಇದಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದರಿಂದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾಗಿದ್ದವು.
ಈ ಬಗ್ಗೆ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.